ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪರವಾಗಿ ಗುರುವಾರ (ಮೇ 4) ರಂದು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮೋಹಕ ತಾರೆ ರಮ್ಯಾ (Ramya), ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shivarajkumar) ಹಾಗೂ ನಟ ದುನಿಯಾ ವಿಜಯ್ (Duniya Vijay) ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಬೆಳಿಗ್ಗೆಯಿಂದ ಸಂಜೆವರೆಗೆ ವರುಣಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸ್ಯಾಂಡಲ್ವುಡ್ ನಟರು ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಲಿದ್ದಾರೆ ವಿಧಾನಸಭಾ ಚುನಾವಣೆಗೆ ದಿನಗಣನೆ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೆಕೆಂದು ಪಣ ತೊಟ್ಟಿರುವ ಸಿದ್ದರಾಮಯ್ಯ ಅವರು ವರುಣಾದಲ್ಲಿ ಎರಡು ದಿನ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಸ್ಟಾರ್ ಪ್ರಚಾರಕಾಗಿರುವ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ, ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ಕುಮಾರ್ ಹಾಗೂ ನಟ ದುನಿಯಾ ವಿಜಯ್ ಸಿದ್ದರಾಮಯ್ಯ ಅವರ ಪರ ಪ್ರಚಾರಕ್ಕಿಳಿಯುತ್ತಿದ್ದಾರೆ. ಈಗಾಗಲೇ ಕೆಲವು ದಿನಗಳಿಂದ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿದ್ದು, ಇದಕ್ಕೆ ಕೌಂಟರ್ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರನ್ನ ಕಣಕ್ಕಿಳಿಸುತ್ತಿದೆ.