ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪಕ್ಷಾಂತರದ ಪರ್ವ ತಲೆಬಿಸಿ ಉಂಟುಮಾಡಿದೆ. ಕಳೆದ ವಾರವಷ್ಟೇ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದ ಬಾಬುರಾವ್ ಚಿಂಚನಸೂರ್ ಬಿಜೆಪಿಗೆ ಶಾಕ್ ನೀಡಿದ್ದರು. ಆದರೆ ಈಗ ಮತ್ತೊಬ್ಬ ಪ್ರಭಾವಿ ನಾಯಕ, ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿಯೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಕ್ಕೆ ಮುಂದಾಗಿದ್ದಾರೆ.
ಯಾದಗಿರಿ ಮತಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ತವಕದಲ್ಲಿರುವ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಸೇರುವ ಆಸೆಯಿಂದ ಡಿಕೆಶಿಯವರನ್ನು ಭೇಟಿಯಾಗಿ, ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನೂ ಆಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಾಲಕರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತೇ ‘ಕೈ’ ಹಿಡಿದಿದ್ದರಿಂದ ಮಾಲಕರೆಡ್ಡಿಯೂ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.