ನಾನು ನನ್ನ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಸಿಎಂ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ತೆರೆ ಬಿದ್ದಿದೆ.
ಹಾವೇರಿ ಜಿಲ್ಲಾಡಳಿತ ಹಾಗೂ ರಂಗಾಯಣ ಧಾರವಾಡ ವತಿಯಿಂದ ಶಿಗ್ಗಾವಿಯಲ್ಲಿ ಏರ್ಪಡಿಸಿದ್ದ ಭಾರತ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚೆನ್ನಮ್ಮ ನಾಟಕ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶಿಗ್ಗಾವಿ ಕ್ಷೇತ್ರ ಬಿಟ್ಟು ನಾನು ಎಲ್ಲಾಯೂ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿಯವರು ಈ ಬಾರಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಮೊದಲ ಕ್ಷೇತ್ರ ಶಿಗ್ಗಾವಿ ಅದರ ಜತೆಗೆ ದಾವಣಗೆರೆ ಉತ್ತರ ಕ್ಷೇತ್ರದಲ್ಲಿಯೂ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆ ಪೂರಕವೆಂಬಂತೆ ದಾವಣಗೆರೆ ಉತ್ತರ ಕ್ಷೇತ್ರದ ಶಾಕಸ ಎಸ್.ಎ.ರವೀಂದ್ರನಾಥ್ ಅವರು ಈ ಬಾರಿ ಸ್ಪರ್ಧಿಸುವುದು ಅನುಮಾನ ಎನ್ನಲಾಗಿತ್ತು. ಸದ್ಯ ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.