ನಂದಿನಿ ವಿಚಾರದಲ್ಲಿ ಪ್ರತಿಪಕ್ಷಗಳು ಕೀಳು ರಾಜಕೀಯ ಮಾಡುತ್ತಿವೆ ಎಂದು ಸಿಎಂ ಬೊಮ್ಮಾಯಿ ಅವರು ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ನಮ್ಮ ನಂದಿನಿ ಹಾಲಿಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ.
ಎಲ್ಲಾ ರಾಜ್ಯಗಳಲ್ಲಿಯೂ ಇದು ದೊರೆಯುತ್ತಿದ್ದು, ಹೊರ ದೇಶಗಳಿಗೂ ರಫ್ತಾಗುತ್ತಿದೆ. 2018ರಲ್ಲಿ ಪ್ರತಿದಿನ 84 ಲಕ್ಷ ಲೀಟರ್ ಹಾಲು ಉತ್ಪಾದಿಸಲಾಗುತ್ತಿತ್ತು. ಪ್ರಸ್ತುತ 94 ಲಕ್ಷ ಲೀಟರ್ ಹಾಲನ್ನು ಉತ್ಪಾದಿಸಲಾಗುತ್ತಿದೆ. ಈ ಅಂಕಿ ಅಂಶಗಳನ್ನು ಗಮನಿಸಿದರೆ ಸಾಕು, ನಂದಿನಿಯ ಬ್ರಾಂಡ್ ಮೌಲ್ಯ ಎಷ್ಟರ ಮಟ್ಟಿಗೆ ಹೆಚ್ಚಿದೆ ಎಂಬುದು ತಿಳಿಯುತ್ತದೆ.