ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಕಾರ್ಯಕರ್ತರೇ ನಮ್ಮ ಶಕ್ತಿ, ಅವರಿಂದಲೇ ನಮ್ಮ ಪಕ್ಷ ಗಟ್ಟಿಯಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕ್ಷೇತ್ರದ ಆಣದೂರು, ಆಣದೂರುವಾಡಿ, ಸಿಖೇನಪೂರ ಸೇರಿದಂತೆ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ಮುಖಂಡರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಸ್ವಾಭಿಮಾನಿಗಳಾಗಿದ್ದಾರೆ. ಅವರೇ ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅವರಿಂದಲೇ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಏನು ಇಲ್ಲ, ಈಗ ಅಧಿಕಾರದಲ್ಲಿರುವುದು ಉದ್ರಿ ಸರ್ಕಾರ. ಕಾಂಗ್ರೆಸ್ ನವ್ರು ತಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದ ರಾಜ್ಯದಲ್ಲಿ ಗ್ಯಾರಂಟಿ ಕೊಟ್ಟಿಲ್ಲ. ಅಧಿಕಾರದಲ್ಲಿ ಇಲ್ಲದ ನಮ್ಮ ರಾಜ್ಯದಲ್ಲಿ ಗ್ಯಾರಂಟಿ ಕೊಡ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದಮೇಲೆ ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೇ ನಾವು ನಮ್ಮ ಪಕ್ಷ ಬಂದ್ ಮಾಡಿಕೊಳ್ತೇವೆ ಅಂತ ಯಾವುದೇ ಪಕ್ಷದವ್ರು ಹೇಳಿಲ್ಲ. ನಮ್ಮ ಪಕ್ಷದ ಕುಮಾರಸ್ವಾಮಿರವರು ಆ ಮಾತು ಹೇಳಿದ್ದಾರೆ.