2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಪ್ರಿಯಾಂಕಾ ಗಾಂಧಿ ಮೇ 6 ಮತ್ತು ರಾಹುಲ್ ಗಾಂಧಿ 7 ಮತ್ತು 8ರಂದು ರೋಡ್ ಶೋ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ನಾಳೆ ನಗರದ ಕೇಂದ್ರ ಭಾಗವಾದ ಗಾಂಧಿ ನಗರ ಮತ್ತು ವಿಜಯನಗರ ವಿಧಾನ ಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ರಾಹುಲ್ ಗಾಂಧಿ ಅವರು ಭಾನುವಾರ ಹಾಗೂ ಸೋಮವಾರ ನಗರದ ಹೊರವಲಯದ ಹಲವು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದು ಯಾವ್ಯಾವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ. ಮತ್ತೊಂದೆಡೆ ಮೇ. 6ರಂದು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರು ಸಹ ರಾಜ್ಯಕ್ಕೆ ಆಗಮಿಸಲಿದ್ದು ಹುಬ್ಬಳ್ಳಿಯಲ್ಲಿ ಪಕ್ಷದಿಂದ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಲಿದ್ದಾರೆ.
