ಸಲಿಂಗ ವಿವಾಹ (Same Sex Marriages) ವಿಚಾರ ಸಂಸತ್ತಿನ ವ್ಯಾಪಿಗೆ ಬರುವ ಹಿನ್ನೆಲೆ ಅದಕ್ಕೆ ಮಾನ್ಯತೆ ನೀಡುವ ಬಗ್ಗೆ ಸಂಸತ್ತು ನಿರ್ಧರಿಸಬೇಕು, ಇದರಲ್ಲಿ ಸುಪ್ರೀಂಕೋರ್ಟ್ (Supreme Court) ಮಧ್ಯಪ್ರವೇಶ ಮಾಡಬಾರದು ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ಒಂದು ವೇಳೆ ವಿಚಾರಣೆ ನಡೆಸುವುದಾದರೆ ಅರ್ಜಿ ಸಿಂಧುತ್ವದ ಬಗ್ಗೆ ಮೊದಲು ವಿಚಾರಣೆ ನಡೆಯಬೇಕು ಎಂದು ಅವರು ಆಗ್ರಹಿಸಿದರು.
ಸಲಿಂಗ ವಿವಾಹಗಳ ಕಾನೂನಿನ ಮಾನ್ಯತೆ ನೀಡುವ ಬಗ್ಗೆ ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ವಿಚಾರಣೆ ಆರಂಭವಾಗಿದೆ. ಇಂದು ವಿಚಾರಣೆ ವೇಳೆ ವಾದ ಆರಂಭಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸಲಿಂಗ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದರು.