ತಮಿಳುನಾಡಿನಲ್ಲಿ ಸರ್ಕಾರಿ ಸಿಬ್ಬಂದಿಯೋರ್ವನನ್ನು ಇಬ್ಬರು ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ತಮಿಳುನಾಡಿನ ತಿರುನ್ವೆಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ವ್ಯಕ್ತಿ ತಮಿಳುನಾಡಿನ ತೂತುಕುಡಿಯ ಗ್ರಾಮ ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಇವರ ಕಚೇರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.
ಥಳಿತದಿಂದಾಗಿ ಅಧಿಕಾರಿ ಲುರ್ಡು ಫ್ರಾನ್ಸಿಸ್ (Lurdu Francis) ಅವರು ಪ್ರಜ್ಞಾಶೂನ್ಯರಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಗ್ರಾಮಸ್ಥರು ಅವರನ್ನು ತಿರುನಲ್ವೆಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಾಥಮಿಕ ಸುಳಿವಿನ ಆಧಾರದ ಮೇಲೆ ಓರ್ವನನ್ನು ಬಂಧಿಸಲಾಗಿದೆ. ಮೃತ ಅಧಿಕಾರಿಯ ಕುಟುಂಬಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ (MK Stalin) 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಕುಟುಂಬದ ಓರ್ವನಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.